ಮಾನ್ಯ ಮುಖ್ಯಮಂತ್ರಿಗಳಿಂದ ಮಳೆಹಾನಿ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ ನೆಡೆಸಲಾಯಿತು
ಶಿವಮೊಗ್ಗ ಜುಲೈ 26ರಂದು
ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬುಧವಾರ ಸಂಜೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಶಿವಮೊಗ್ಗ ಜಿಲ್ಲೆಗೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಮಾತನಾಡಿ, ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ನೀರಿನ ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ ಜಲಾಶಯದಲ್ಲಿ 1778.9 ಅಡಿ ನೀರು ಭರ್ತಿಯಾಗಿದೆ. ಭದ್ರಾ ಜಲಾಶಯದಲ್ಲಿ 152.9 ಅಡಿ ನೀರು ಇದೆ. ಮನೆ ಹಾನಿ ಮತ್ತು ಜಾನುವಾರು ಹಾನಿಗೆ ಸಂಬಂಧಿದಂತೆ ಪರಿಹಾರ ನೀಡಲಾಗಿದೆ. ಹಾಗೂ ಮಳೆ ಹಾನಿ/ಅವಘಡಗಳ ಕುರಿತು ಮುಂಜಾಗೃತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಇತ್ತೀಚೆಗೆ ತುಂಗಾ ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯನ್ನು ಹಿಡಿದು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಇದೇ ವೇಳೆ ಶರಾವತಿ ಹಿನ್ನೀರು ಸಂತ್ರಸ್ತರ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಈ ಕುರಿತು ತಾವು ಕಂದಾಯ, ನೀರಾವರಿ, ಅರಣ್ಯ ಇತರೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.
ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿ, ಮಳೆ ಹೆಚ್ಚಾದಾಗ ಮತ್ತು ಪ್ರವಾಹ ಸಂದರ್ಭದಲ್ಲಿ ಜೀವಹಾನಿ ತಡೆಗಟ್ಟುವ ನಿಟ್ಟಿನಲ್ಲಿ
ಮುಂಜಾಗರೂಕತವಾಗಿ ಎಲ್ಲಾ ರೀತಿಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು. ಅಪಾಯದ ಮಟ್ಟ ಮೀರಿ ಹರಿಯುವ ನದಿಗಳು ಮತ್ತು ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿ ಜಿಲ್ಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ವಾರ್ ರೂಂ ತೆರೆಯಬೇಕು. ಕಂದಾಯ, ಗ್ರಾಮೀಣಾಭಿವೃದ್ದಿ, ಪೊಲೀಸ್, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು.
ಪದೇ ಪದೇ ಮಳೆ ಹಾನಿಗೊಳಗಾಗುವ ಪ್ರಕರಣಗಳಿಗೆ ಸಂಬಂಧಿಸಿಂದತೆ ಪುನರ್ವಸತಿಗೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ರೈತರ ಆತ್ಮಹತ್ಯೆಗೆ ಕಾರಣವಾಗುವ ಅಂಶಗಳಾದ ಬಲವಂತದ ಸಾಲ ವಸೂಲಾತಿ ಇತರೆ ಅಂಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದರು.
ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳು ಸೋರುತ್ತಿದ್ದರೆ ಅಥವಾ ಇತರೆ ಸಮಸ್ಯೆ ಇದ್ದರೆ ಪರಿಶೀಲಿಸಿ ಅಗತ್ಯವಿರುವ ರಿಪೇರಿಯನ್ನು ಕೂಡಲೇ ಮಾಡಿಸಬೇಕು.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮಾತನಾಡಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕೆಂದರು. ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರು ಮಾತನಾಡಿ ಮಳೆ ಕೊರತೆ ಇರುವೆಡೆ ಪರ್ಯಾಯ ಬೆಳೆ ಬೆಳೆಯಲು ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಇತ್ಯಾದಿ ದಾಸ್ತಾನಿಗೆ ಕ್ರಮ ವಹಿಸಬೇಕೆಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಇತರೆ ಅಧಿಕಾರಿಗಳು ಹಾಜರಿದ್ದರು
ಗುರು.ಕಮ್ಮರಡಿ