ಶಿವಮೊಗ್ಗ :
ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಪಿಯುಸಿ ಪೂರಕ ಪರೀಕ್ಷೆ-2 ಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಮೊಗ್ಗ ನಗರದಲ್ಲಿ 02 ಹಾಗೂ ತಾಲ್ಲೂಕುಗಳಲ್ಲಿ 6 ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2560 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ.
ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಮುಖ್ಯ ಅಧೀಕ್ಷಕರು ಹಾಗೂ ಉತ್ತಮ ಪತ್ರಿಕೆ ಪಾಲಕರ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ.
ಪರೀಕ್ಷಾ ಕೊಠಡಿಯೊಳಗೆ ಸೂಕ್ತ ಆಸನ ವ್ಯವಸ್ಥೆಯಾಗಬೇಕು. ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತು, ಬ್ಲೂಟೂತ್ ಡಿವೈಸ್ ತರುವಂತಿಲ್ಲ. ಈ ಬಗ್ಗೆ ಕಟ್ಟುನಿಟ್ಟಾಗಿ ಪೊಲೀಸ್ ಇಲಾಖಾ ಸಿಬ್ಬಂದಿ ತಪಾಸಣೆ ಕೈಗೊಳ್ಳಬೇಕು. ಹಾಗೂ ಪರೀಕ್ಷೆಗಳನ್ನು ಯಶಸ್ವಿಯಾಗಿ ಹಾಗೂ ಶಾಂತ ರೀತಿಯಲ್ಲಿ ನಡೆಸಲು ಅಗತ್ಯವಾದ ಸಕಲ ತಯಾರಿಯನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಡಿಪಿಯು ಬಿ.ಕೃಷ್ಣಪ್ಪ ಮಾತನಾಡಿ, ಪರೀಕ್ಷಾ ಮಾರ್ಗಸೂಚಿಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳಿಗೆ ತಿಳಿಸಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಅಧಿಕಾರಿಗಳು ಹಾಜರಿದ್ದರು.
ಗುರು.ಕಮ್ಮರಡಿ
Voice of common man in words