ಮಂಗಳೂರು: ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು: ಹಿಂದೂಪರ ಕಾರ್ಯಕರ್ತನ ಹತ್ಯೆ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಮಂಗಳೂರು: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ನಡೆದಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಸಂಪೂರ್ಣ ಕರಾವಳಿಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.! ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಬಜ್ಪೆಯ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು.
ಇದೀಗ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿದೆ. ಸುಹಾಸ್ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಆಗಮಿಸಿದ್ದಾರೆ.
ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದು.ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
ಪ್ರಮುಖ ಸ್ಥಳಗಳಲ್ಲಿ ನಾಕಾಬಂದಿ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.ಕಾರಣ ಕೊಲೆಯಾದ ಸುಹಾಸ್ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರ ಪಡೆಯನ್ನು ಹೊಂದಿದ್ದಾರೆ. ಹೀಗಾಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಆರೋಪಿಗಳ ಪತ್ತೆಗೆ ಬಲೆಬಿಸಿದ್ದಾರೆ.

