ಬಂಟ್ವಾಳ : ರಹಿಮಾನ್ ಹತ್ಯೆ ಪ್ರಕರಣ: ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲು
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಮಂಗಳೂರು : ಬಂಟ್ವಾಳ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೀತ್,ದೀಪಕ್ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ನನ್ನು ಹತ್ಯೆಮಾಡಲಾಗಿತ್ತು. ಇವನ ಜೋತೆಗಿದ್ದ ಕಲಂದರ್ ಶಾಫಿ ಕೂಡ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಇಬ್ಬರು ಸೇರಿದಂತೆ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಮಾರಣಾಂತಿಕ ಹಲ್ಲೆಗೆ ಸಂಭಂಧಿಸಿದಂತೆ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ದೂರು ದಾಖಲಾಗಿದ್ದು ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ನದಿ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆಳೆದುಕೊಂಡು ತಲವಾರು, ಚೂರಿ, ರಾಡ್ ಗಳೊಂದಿಗೆ ಮನಬಂದಂತೆ ಕತ್ತರಿಸಿ ಹೊಡೆದಿದ್ದಾರೆ.! ಆಗ ಪಕ್ಕದಲ್ಲಿದ್ದ ನಾನು ತಡೆಯಲು ಹೋದಾಗ ಚೂರಿಯಿಂದ ನನ್ನ ಎದೆಗೆ, ಬೆನ್ನಿಗೆ, ಕೈಗೆ, ತಿವಿದು ತಲವಾರ್ ನಿಂದ ಕಡಿದಿದ್ದಾರೆ. ಈ ವೇಳೆ ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಘಟನೆಯ ಸಂಪೂರ್ಣ ಮಾಹಿತಿ ನೀಡಿದ್ದಾನೆ. ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ಬಾಳ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಅಬ್ದುಲ್ ರಹಿಮಾನ್ ಅವರು ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದು ತೀವ್ರವಾಗಿ ಗಾಯಗೊಂಡ ಕಲಂದರ್ ಶಾಫಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಊರಿನ ಜನರೊಂದಿಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ.
ದುಷ್ಕರ್ಮಿಗಳ ಗುಂಪು ಕೋಮು ಭಾವನೆಯಿಂದ ಅಥವಾ ಇನ್ನಾವುದೋ ಕಾರಣಕ್ಕೆ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದು, ಕಲಂದರ್ ಶಾಫಿ ಅವರನ್ನು ತೀವ್ರವಾಗಿ ಗಾಯಗೊಳಿಸಿ ಕೊಲೆ ಪ್ರಯತ್ನ ಮಾಡಿದ್ದಾರೆ. ಈ ಕೃತ್ಯದಲ್ಲಿ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು ಇತರರು ಭಾಗಿಯಾಗಿದ್ದಾರೆ ಎಂದು ದೂರುದಾರ ನಿಸಾರ್ ನೀಡಿರುವ ದೂರಿನಲ್ಲಿದೆ.

ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳಿಂದ ಕೊಲೆಯತ್ನಕ್ಕೀಡಾಗಿದ್ದ ಕಲಂದರ್ ಶಾಫಿ ಅವರು ನೀಡಿದ ಮಾಹಿತಿ ಆಧರಿಸಿ ನಾಸೀರ್ ಅವರು ನೀಡಿದ ದೂರಿನಂತೆ ಬಂಟ್ವಾಳ ಪೊಲೀಸರು ಭಾರತೀಯ ನ್ಯಾಯ ಸಂಹಿತ ಕಾಯ್ದೆಯಡಿ 2023 (Uls-103, 109, 118(1), 118(2), 190, 191(1), 191(2), 191(3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಈ ಪ್ರಕರಣದ ಆರೋಪಿಗಳನ್ನು ಬಂಧಿಸಲು ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ವಿಶೇಷ ಪೊಲೀಸ್ ತಂಡಗಳು ರಚಿಸಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರ 5 ವಿಷೇಶ ತಂಡಗಳು ಆರೋಪಿಗಳ ಹೆಡೆಮುರಿ ಕಟ್ಟಲು ಈಗಾಗಲೇ ಕಾರ್ಯಚರಣೆಗೆ ಇಳಿದಿದ್ದಾರೆ.

ಸದ್ಯ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳ ಮಾಹಿತಿ ಕಲೆಹಾಕಲಾಗಿದೆ ಎನ್ನಲಾಗಿದೆ. ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.


