Headlines

“ಧರ್ಮಸ್ಥಳ” ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ : ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸುವಂತೆ ಸಿಎಂಗೆ ಪತ್ರ

ಅಶ್ವಸೂರ್ಯ/ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ . ಅಲ್ಲದೆ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಏಳು ದಿನಗಳೊಳಗೆ ಘಟನೆಯ ಬಗ್ಗೆ ವರದಿ ನೀಡುವಂತೆ ಪತ್ರ ಬರೆಯಲಾಗಿದೆ.

ಪತ್ರದಲ್ಲಿರು ವಿಷಯವೇನು :

ಧರ್ಮಸ್ಥಳ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಜುಲೈ.7ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ.
ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಆಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

7 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ :

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ. ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಆಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ಮತ್ತು ಅತ್ಯಾಚಾರ ಪ್ರಕರಣಗಳ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಮಹಿಳಾ ಆಯೋಗಕ್ಕೆ ಕಳುಹಿಸುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ

Leave a Reply

Your email address will not be published. Required fields are marked *

Optimized by Optimole
error: Content is protected !!