ಬೆಂಗಳೂರು : ರಾಜ್ಯದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ.!ಗುಂಡಿ ತಪ್ಪಿಸಲು ಹೋದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು.!
news.ashwasurya.in
ಅಶ್ವಸೂರ್ಯ/ಬೆಂಗಳೂರು: ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಮಹಿಳೆಯೋರ್ವರು ಅಪಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಇಡೀ ಕರಾವಳಿಗರನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೂದಿಗೆರೆ ಕ್ರಾಸ್ ಬಳಿ ಸೋಮವಾರ ನಡೆದಿದೆ.
ತನುಶ್ರೀ (22) ಮೃತ ದುರ್ದೈವಿ. ಈಕೆ ರಸ್ತೆ ಗುಂಡಿ ತಪ್ಪಿಸುವ ಯತ್ನದಲ್ಲಿ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ತನುಶ್ರೀ, ಬಿ.ಕಾಂ ಓದುತ್ತಿದ್ದರು. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು ರಸ್ತೆಯ ಗುಂಡಿ ಸಾವಿನ ಮನೆ ಸೇರಿಸಿದೆ.! ಬೂದಿಗೆರೆ ಕ್ರಾಸ್ ಬಳಿ ರಸ್ತೆಯು ಗುಂಡಿ ಬಿದ್ದು ಸಂಪೂರ್ಣ ಹಾಳಾಗಿದ್ದು, ಅದೇ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ತನುಶ್ರೀ, ರಸ್ತೆ ಗುಂಡಿ ತಪ್ಪಿಸಲು ಬಲ ಬದಿಗೆ ವಾಹನ ಚಾಲನೆ ಮಾಡಿದ್ದಾರೆ.
ಅದೇ ವೇಳೆಗೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ತನುಶ್ರೀ ಮೇಲೆ ಟಿಪ್ಪರ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಲಾರಿ ಪತ್ತೆ ಹಚ್ಚಿದ್ದೇವೆ ಮತ್ತು ಚಾಲಕನ ಬಗ್ಗೆ ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆ ಅವ್ಯವಸ್ಥೆ ಹಾಗೂ ತನುಶ್ರೀ ಅವರ ಸಾವಿನಿಂದ ಆಕ್ರೋಶಗೊಂಡ ಸ್ಥಳೀಯರು ಘಟನಾ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬೂದಿಗೆರೆ ಸುತ್ತಮುತ್ತಲಿನ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ರಸ್ತೆಗಳು ಗುಂಡಿ ಬಿದ್ದಿದ್ದು, ಪ್ರತಿನಿತ್ಯ ಅಪಘಾತ ಸಂಭವಿಸುತ್ತಿವೆ. ಆದರೂ ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ, ವಿದ್ಯಾರ್ಥಿನಿ ತನುಶ್ರೀ ಸಾವಿಗೆ ರಸ್ತೆ ಗುಂಡಿಗಳೇ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.


