ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು…
news.ashwasurya.in
ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಜಾಲ್ ನಂತೂರು ನಿವಾಸಿ, ಹಾಲಿ ಪಡೀಲ್ನ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿದ್ದ ಮೊಹಮ್ಮದ್ ಇಬ್ರಾಹಿಂ ಸಿನಾನ್ ಅಲಿಯಾಸ್ ಚಿನ್ನು (21) ಬಂಧಿತ ಆರೋಪಿಯಾಗಿದ್ದಾನೆ. ಈತ ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್’ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಇಬ್ರಾಹಿಂ ಸಿನಾನ್, 2026ರ ಫೆಬ್ರವರಿ ತಿಂಗಳಲ್ಲಿ ಆರೀಫ್ ಹುಸೇನ್ ಕೊಲೆಗೆ ಸಂಚು ರೂಪಿಸಿದ್ದ ವೇಳೆ ಭಾಗಿಯಾಗಿದ್ದ ಹಾಗೂ ಮಾರ್ಚ್ 27 ರಂದು ನಡೆದ ಕೊಲೆ ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಈತನ ವಿರುದ್ಧ ಈಗಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಎರಡು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಪ್ರಕರಣದ ಹಿನ್ನೆಲೆ:
ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ತನಿಖೆಯನ್ನು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು.

ಈಗಾಗಲೇ 11 ಮಂದಿ ಜೈಲಿಗೆ, ಕೋಕಾ ಕಾಯ್ದೆ ಅಡಿ ತನಿಖೆ:
ಈ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಮೊಹಮ್ಮದ್ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ ಅಲಿಯಾಸ್ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಮೊಹಮ್ಮದ್ ಶಾಕೀರ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಇರ್ಷಾದ್ ಅಲಿಯಾಸ್ ಅಕುಡು, ಮಹಮ್ಮದ್ ಹರ್ಷಾದ್, ನಿಶಾಕ್ ಅಲಿಯಾಸ್ ಪುಚ್ಚೆ ನಿಶಾಕ್, ಬಿ. ಜುನೈದ್ ಅಲಿಯಾಸ್ ಕೊಕ್ಕಡ ಜುನೈದ್ ಹಾಗೂ ಮೊಹಮ್ಮದ್ ಸುಹೇಲ್ ಅಲಿಯಾಸ್ ಚಿಯಾ ಎಂಬ 11 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಸ್ತುತ ಇವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕೋಕಾ ಕಾಯ್ದೆ” ಅಡಿಯಲ್ಲಿ ತನಿಖೆ ಮುಂದುವರಿದಿದೆ.


