ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ.!!
news.ashwasurya.in
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಪ್ರಮುಖ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದ ಇವರು, ತಮಿಳುನಾಡು ಮತ್ತು ಪುದುಚೇರಿಯ ಎಐಸಿಸಿ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದರು…..
ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ರಾಜಕಾರಣದ ಪ್ರಭಾವಿ ಸಂಘಟಕ, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಭಾನುವಾರ ರಾತ್ರಿ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದ ಸೂರಜ್ ಹೆಗ್ಡೆ, ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹಾಗೂ ತಳಮಟ್ಟದ ಪಕ್ಷ ಸಂಘಟನೆಯ ಮೂಲಕ ರಾಜಕೀಯ ವಲಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧು-ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

ಯುವ ಕಾಂಗ್ರೆಸ್ನಿಂದ ಎಐಸಿಸಿಯವರೆಗೆ ರಾಜಕೀಯ ಪಯಣ :
ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯ ಪ್ರವೇಶಿಸಿದ್ದ ಸೂರಜ್ ಹೆಗ್ಡೆ, ಅತ್ಯಂತ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು. ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯಗಳ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸೂರಜ್ ಹೆಗ್ಡೆ, ತಮ್ಮ ತಾತ ದೇವರಾಜ ಅರಸು ಅವರ ರಾಜಕೀಯ ಸಿದ್ಧಾಂತ ಮತ್ತು ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದರು. ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಅವರು ಸದಾ ಶ್ರಮಿಸುತ್ತಿದ್ದರು. ಯಾವಾಗಲೂ ಕಾರ್ಯಕರ್ತರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.
ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

“ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು” ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಪ್ರಮುಖ ನಾಯಕರು ಸೂರಜ್ ಹೆಗ್ಡೆ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದ್ದಾರೆ.

