ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!
news.ashwasurya.in
ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ…
ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಸಜ್ಜಾಗಿರುವ ಸಂದರ್ಭದಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅಚ್ಚರಿಯ ರೀತಿಯಲ್ಲಿ ಮುನ್ನೆಲೆಗೆ ಬಂದಿದೆ.
ಮೂಲಗಳ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಿಪ್ರಸಾದ್ ಅವರನ್ನು ಸಚಿವರನ್ನಾಗಿಸುವ ಜೊತೆಗೆ ವಿಧಾನ ಪರಿಷತ್ನಲ್ಲಿ ಸಭಾನಾಯಕರನ್ನಾಗಿ ನೇಮಿಸಲು ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ.

ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿದರೆ, ಅದು ಅಧಿಕಾರದ ಜೊತೆಗೆ ಪಕ್ಷ ಸಂಘಟನೆಗೂ ಬಲ ಸಿಗಲಿದೆ ಎಂಬುದು ಇದರ ಹಿಂದಿನ ವಾದವಾಗಿದೆ.
ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದೆ. ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ಭಾನುವಾರ ಮರಳಿದ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಈ ಭೇಟಿಯ ಬಳಿಕ ಸಿದ್ದರಾಮಯ್ಯ ಅವರ ಯೋಜನೆ ಫಲ ನೀಡುತ್ತದೆಯೇ ಎಂಬುದು ಸ್ಪಷ್ಟವಾಗಲಿದೆ.


