ಶೃಂಗೇರಿ ರೀಕೌಂಟಿಂಗ್; ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ.
news.ashwasurya.in
ಅಶ್ವಸೂರ್ಯ/ನವದೆಹಲಿ : ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರುಮತ ಎಣಿಕೆ ಪ್ರಶ್ನಿಸಿ ಶಾಸಕ ರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
2023ರ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಮೂಲ ವಿಡಿಯೋವನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತಾಕೀತು ಮಾಡಿರುವ ಪೀಠ, ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೆ ಚುನಾವಣಾ ಆಯೋಗದ ವಿರುದ್ಧ ಪ್ರತಿಕೂಲ ಅಭಿಪ್ರಾಯ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ಮರುಮತ ಎಣಿಕೆಯ ವೀಡಿಯೋವನ್ನು ಒದಗಿಸಲಾಗಿದ್ದರೂ, 2023ರ ಮೂಲ ಮತ ಎಣಿಕೆಯ ವೀಡಿಯೋ ಲಭ್ಯವಾಗುತ್ತಿಲ್ಲ ಎಂದು ಚುನಾವಣಾ ಆಯೋಗದ ಪರವಾಗಿ ತಿಳಿಸಲಾಯಿತು. ಮೂಲ ವೀಡಿಯೋ ಎಲ್ಲಿ? ಮೂಲ ವೀಡಿಯೋ ಲಭ್ಯವಿಲ್ಲ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಮೂಲ ವೀಡಿಯೋವನ್ನು ಹಾಜರುಪಡಿಸುವುದು ಹೇಗೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿತು.
ಸಂಬಂಧಪಟ್ಟ ಅಧಿಕಾರಿಗಳು ವರ್ಗಾವಣೆಯಾಗಿರುವುದರಿಂದ ದಾಖಲೆಗಳನ್ನು ಒದಗಿಸುವುದು ಕಷ್ಟವಾಗುತ್ತಿದೆ ಎಂಬ ಆಯೋಗದ ವಾದವನ್ನು ಪೀಠ ಒಪ್ಪಲಿಲ್ಲ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣ ಹಿನ್ನೆಲೆ.:
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿ, ತಿರಸ್ಕೃತಗೊಂಡಿದ್ದ ಅಂಚೆ ಮತಗಳ ಮರು ಪರಿಶೀಲನೆ ಹಾಗೂ ಮರುಎಣಿಕೆಗೆ ಮನವಿ ಮಾಡಿದ್ದರು. ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರುಎಣಿಕೆ ನಡೆದಾಗ, ರಾಜೇಗೌಡ ಅವರ ಮತಗಳ ಸಂಖ್ಯೆ ಕಡಿಮೆಯಾಗಿ ಜೀವರಾಜ್ ಅವರು ವಿಜೇತರಾಗಿದ್ದಾರೆಂದು ಘೋಷಿಸಲಾಯಿತು. ಬಳಿಕ ಈ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜೇಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿ ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತು. ಇದೀಗ ಪ್ರಕರಣದ ವಿಚಾರಣೆ ವೇಳೆ ಚುನಾವಣಾ ಆಯೋಗವು 2023ರ ಮೂಲ ಫಲಿತಾಂಶದ ಒರಿಜಿನಲ್ ವಿಡಿಯೋ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.


