ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಅರೇಸ್ಟ್ : ವಿದೇಶಕ್ಕೆ ಹೋಗುವ ಮೊದಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಎನ್‌ಐಎ ತಂಡ
news.ashwasurya.in
sudhir vidhata
ಅಶ್ವಸೂರ್ಯ/ನವದೆಹಲಿ: ಕರ್ನಾಟಕದಲ್ಲಿ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂದು ಗುರುತಿಸಲಾಗಿದ್ದು
ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂಬುವನಾಗಿದ್ದು, ತನ್ನ ಬಂಧನದ ಹಿನ್ನಲೆಯಲ್ಲಿ ಪೋಲಿಸರ ಕಣ್ ತಪ್ಪಿಸಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮ ಅಕ್ಷಯ ಫ್ರೆಶ್ ಚಿಕೆನ್ ಫಾರ್ಮ್ ಶಾಪ್ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
2022ರ ಜುಲೈ 26ರಂದು ರಾತ್ರಿ 8.30ರ ವೇಳೆ ಪ್ರವಿಣ್ ತನ್ನ ಚಿಕನ್ ಸ್ಟಾಲ್ ಅನ್ನು ಮುಚ್ಚಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವ ಸಂಧರ್ಭದಲ್ಲಿ ಕೆಲ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ನೆಟ್ಟಾರು ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದರು.
ಈ ಘಟನೆ ಕುರಿತು ಪ್ರವೀಣ್ ಸ್ನೇಹಿತ ಮಧು ಕುಮಾರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದ ವೇಳೆ ಪ್ರಕರಣವನ್ನು ಎನ್‌ಐಎಗೆ ವಹಿಸಿ 2022ರ ಆಗಸ್ಟ್ 3ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಇದು ವರೆಗೂ ಬಂಧಿತರ ಸಂಖ್ಯೆ 19ಕ್ಕೆ ಏರಿದೆ.