ವಯನಾಡಿನ ಗುಡ್ಡದಲ್ಲಿ ಜಲಸ್ಫೋಟ: ಎಂಟು ಮಂದಿ ಸಾವು, ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ.?
ಅಶ್ವಸೂರ್ಯ/ಶಿವಮೊಗ್ಗ: ಕೇರಳದ ವಾಯನಾಡಿನಲ್ಲಿ ಜಲಸ್ಫೋಟವಾಗಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಸುಕಿನ ಜಾವ 2 ಗಂಟೆಗೆ ಮೊದಲ ಗುಡ್ಡಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆಗೆ ಎರಡನೇ ಬಾರಿ ಗುಡ್ಡಕುಸಿತ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು ಕಾರ್ಯಚರಣೆ ನೆಡೆಯುತ್ತಿದೆ.
ವಯನಾಡು ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಮೃತಪಟ್ಟಿದೆ.
ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.